ರಾಜ್ಯ

ಹಿಜಾಬ್ ಪ್ರಕರಣ ಆದೇಶ ಸಂಭವ : ಧಾರವಾಡ ಜಿಲ್ಲೆಯಾದ್ಯಂತ ಮಾ.15 ರಿಂದ 19 ರವರೆಗೆ 144 ಸೆಕ್ಷನ್ ಜಾರಿ

-ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ

ಧಾರವಾಡ prajakiran. com ಮಾ.14:

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು ದಿನಾಂಕ 15-03-2022 ರಂದು ಬೆಳಿಗ್ಗೆ 06:00 ಗಂಟೆಯಿಂದ 19-03-2022 ರಂದು ಬೆಳಿಗ್ಗೆ 06:00 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ . ಶಸ್ತ್ರ , ಬಡಿಗೆ , ಭರ್ಚಿ , ಖಡ್ಗ , ಗದೆ , ಬಂದೂಕು , ಚೂರಿ , ಲಾಠಿ , ಡೊಗ್ಗ , ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ .

ಕಲ್ಲುಗಳನ್ನು , ಕ್ಷಾರಪದಾರ್ಥ , ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿ , ಕಲ್ಲುಗಳನ್ನು ಮತ್ತು ಇತರ ಎಸೆಯುವಂತಹ ವಸ್ತುಗಳನ್ನು ಎಸೆಯುವ ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ .

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿ ಬಂಧಿಸಲಾಗಿದೆ .

ಬಹಿರಂಗವಾಗಿ ಘೋಷಣೆ ಮಾಡುವುದು , ಪದ ಹಾಡುವುದು , ವಾದ್ಯ ಬಾರಿಸುವುದು , ವ್ಯಾಖ್ಯಾನ ಕೊಡುವುದು , ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ .

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು , ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು , ಚಿಹ್ನೆಗಳು , ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ .

ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು , ಸ್ಫೋಟಕ ವಸ್ತುಗಳು , ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ .

ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು . ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ . ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *