ಚಿತ್ರದುರ್ಗ prajakiran.com : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂಕ್ರೂಸರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಳು ಜನರು ತೀವ್ರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಇದರಿಂದಾಗಿ ಕ್ರೂಸರ್ನಲ್ಲಿದ್ದ ದುರ್ಗಪ್ಪ, ಮಹೇಶ, ತಿಮ್ಮಣ್ಣ, ರತ್ನಮ್ಮ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನವರು ಎಂದು ಗುರುತಿಸಲಾಗಿದೆ.
ಬೆಂಗಳೂರಿಗೆ ತೆರಳುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡದಿದೆ ಎನ್ನಲಾಗಿದೆ.
ಮೃತರೆಲ್ಲರೂ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದುಬಂದಿದೆ. ಕ್ರೂಸರ್ ಮಾಡಿಕೊಂಡು ತಡರಾತ್ರಿ ತಮ್ಮೂರಿನಿಂದ ಹೊರಟಿದ್ದರು.
ಆದರೆ, ಯಮನಂತೆ ಬಂದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ದುರಂತ ಅಂತ್ಯ ಕಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಏಳು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಚಳ್ಳಕೆರೆ ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ