ರಾಜ್ಯ

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು

ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಪ್ರಜಾಕಿರಣ.ಕಾಮ್ ಸೆ 12: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು.

ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ.

ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ.

ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು.

ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.

ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು.

ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೈರುವುದಿಲ್ಲ ಎಂದು ಎಚ್ಚರಿಸಿದರು.

*ಖಾಸಗಿ ಲೇವಾದೇವಿದಾರರು-ಬ್ಯಾಂಕ್ ಗಳಿಂದ ರೈತರಿಗೆ ಕಿರುಕುಳ ಸಹಿಸಲ್ಲ*

ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ.

ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ.

ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರಿಗಳಿಗೆ ಸೌಲಭ್ಯ ನೀಡುವುದು, ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ.
ನೀವು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ.

ಕೆಲಸ ಮಾಡದಿದ್ದರೆ ಕೆಟ್ಟ ಹೆಸರು ಬರುತ್ತದೆ. ಅದಕ್ಕೋಸ್ಕರ ನಿಮ್ಮ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು,

ಔಷಧ ಪ್ರಿಸ್ಕ್ರಿಪ್ಷನ್‌ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆ ನೀಡಿದರು.

*ಸಿಎಂ ನೀಡಿದ ಇತರೆ ಸೂಚನೆಗಳು*

*ಸ್ಮಶಾನಗಳಿಗೆ ಮತ್ತು ಖಬರ್‌ಸ್ತಾನ್‌ಗಳಿಗೆ ಕೂಡಲೇ ಜಾಗ ಒದಗಿಸಬೇಕು*

*ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಕೇಂದ್ರ ಸ್ಮಶಾನಗಳಿಗೆ ಜಾಗ ಕೂಡಲೇ ಗುರುತಿಸಿ ಕೊಡಬೇಕು*

*ಸಾರ್ವಜನಿಕರಿಗೆ ಭೇಟಿ ಸಮಯ ನಿಗದಿ ಮಾಡಬೇಕು. ಕೇಂದ್ರ ಕಚೇರಿಯಲ್ಲಿರುವಾಗ ಸಾರ್ವಜನಿಕರಿಗೆ ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೂಡಲೇ ಪರಿಹಾರ ಒದಗಿಸಬೇಕು*

*ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಸ್ಟೆಲುಗಳು, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಜಿಲ್ಲಾಧಿಕಾರಿಗಳು ಅಧೀನ ಕಚೇರಿಗಳಿಗೆ ಭೇಟಿ ನೀಡಬೇಕು*

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *