ರಾಜ್ಯ

ಧಾರವಾಡದಲ್ಲಿ ಸೋಂಕಿತರ ಸ್ಥಳಾಂತರಕ್ಕೆ ಪ್ರತಿ ಆ್ಯಂಬುಲೆನ್ಸ್ ಗೆ ಪ್ರತ್ಯೇಕ ನೋಡಲ್ ಅಧಿಕಾರಿ

ಧಾರವಾಡ prajakiran.com : ಕೋವಿಡ್ ಸೋಂಕಿತರ ಸ್ಥಳಾಂತರದ ಕಾರ್ಯನಿರ್ವಹಣೆಗೆ ಜಿಲ್ಲೆಯಲ್ಲಿ ಹನ್ನೊಂದು ಆ್ಯಂಬುಲೆನ್ಸ ಗಳನ್ನು ಮೀಸಲಿಡಲಾಗಿದ್ದು, ಪ್ರತಿ ವಾಹನಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಕರ್ತವ್ಯ ನಿರ್ವಹಿಸಬೇಕು.

ಅಗತ್ಯಬಿದ್ದರೆ ಖಾಸಗಿ ವಾಹನಗಳನ್ನೂ ಕೂಡ ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ಹೆಚ್ಚುತ್ತಿರುವುದರಿಂದ ಸೋಂಕಿತರ ಸ್ಥಳಾಂತರಕ್ಕೆ ಹೆಚ್ಚು ಒತ್ತು  ನೀಡಬೇಕಾಗಿದೆ.

ಅದಕ್ಕಾಗಿ ರಚಿಸಿರುವ ತಂಡದೊಂದಿಗೆ ಜಿಲ್ಲೆಯ ಎಲ್ಲಾ ತಹಸೀಲ್ದಾರರು,ಪ್ರಾದೇಶಿಕ ಸಾರಿಗೆ ಇಲಾಖೆ, ವಾಕರಸಾಸಂ ಅಧಿಕಾರಿಗಳೂ  ಕಾರ್ಯನಿರ್ವಹಿಸಬೇಕು.

ಪ್ರತಿಯೊಂದು ಆ್ಯಂಬುಲೆನ್ಸ್ ವಾಹನಕ್ಕೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವುದು ಹಾಗೂ ಗುಣಮುಖರಾದವರನ್ನು ಮನೆಗೆ ಮರಳಿ ಕಳುಹಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್ ನಿರ್ವಹಣೆಗೆ ರಚಿಸಿರುವ ಎಲ್ಲಾ ತಂಡಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ  ನಿರ್ವಹಿಸಬೇಕು.

ಕೋವಿಡ್ ಕೇರ್ ಸೆಂಟರುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷಣರಹಿತ ಸೋಂಕಿತರಿಗೆ ದಿನಪತ್ರಿಕೆಗಳು,ಒಳಾಂಗಣ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಅವರನ್ನು ಉತ್ಸಾಹಶೀಲರನ್ನಾಗಿಡಬೇಕು.

ಇದಕ್ಕಾಗಿ ಪ್ರತ್ಯೇಕ ಕಾರ್ಯಪಡೆಗಳನ್ನು ರಚಿಸಿ ಕಾರ್ಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಷಣ್ಮುಖ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್,ಡಾ.ಲಕ್ಷ್ಮಿಕಾಂತ ಲೋಕರೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *