ರಾಜ್ಯ

ಧಾರವಾಡ ಜಿಲ್ಲೆಯ ಮುಂಗಾರು, ಅತೀವೃಷ್ಟಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಸೂಚನೆ




ಧಾರವಾಡ prajakiran.com : ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಅತೀವೃಷ್ಟಿ ಸಂಭವಿಸಿದರೆ ಪರಿಸ್ಥಿತಿ ನಿರ್ವಹಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ೨೦೧೯ ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮನೆಗಳ ಪುನರ್‌ನಿರ್ಮಾಣ, ನೆರೆ ಬಾಧಿತ ಸಂತ್ರಸ್ತರಿಗೆ ಆಹಾರ ಕಿಟ್ ಪೂರೈಕೆ, ಮಾನವ ಜೀವಹಾನಿ ಹಾಗೂ ಜಾನುವಾರು ಹಾನಿ ವಿವರಗಳನ್ನು ಪಡೆದರು.



ಪ್ರಸಕ್ತ ವರ್ಷವೂ ಅತಿವೃಷ್ಟಿ ಸಂಭವಿಸಿದರೆ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳ ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಹಳ್ಳದ ನಾಲೆಗಳ ಹೂಳು ತೆಗೆಯಲು ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೂಲಕ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು.

ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಗಳಲ್ಲಿ ರಸ್ತೆಗಳ ಪುನರ್ ನಿರ್ಮಾಣಕ್ಕೆ ೩.೯ ಕೋಟಿ ರೂ.ಗಳ ಅನುದಾನ ಲಭ್ಯವಿದೆ. ಈ ಹಣ ಬಳಸಿಕೊಂಡು ಕೂಡಲೇ ದುರಸ್ತಿಗೆ ಅಗತ್ಯವಿರುವ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು.



ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದಿಂದ ಚೆಕ್‌ಡ್ಯಾಂಗಳ ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್ ಮಾತನಾಡಿ, ಮಳೆಗಾಲ ಪ್ರಾರಂಭವಾಗಿರುವುದರಿಂದ ಡೆಂಗ್ಯೂ, ಚಿಕುನ್‌ಗುನ್ಯಾ ಮತ್ತಿತರ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆಗಳಿರುತ್ತವೆ.

ಸೊಳ್ಳೆ ಹಾಗೂ ಲಾರ್ವಾಗಳ ನಿರ್ಮೂಲನೆಗೆ ರಸಾಯನಿಕಗಳನ್ನು ಸಿಂಪಡಿಸಬೇಕು. ಜನಜಾಗೃತಿ ಮೂಡಿಸಬೇಕು. ಚಿಕಿತ್ಸೆಗೆ ಸಾಕಷ್ಟು ಔಷಧಿ ದಾಸ್ತಾನು ಹೊಂದಿರಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದರು.



ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರೂ.೨೫ ಲಕ್ಷಗಳ ಮೌಲ್ಯದ ಜೀವರಕ್ಷಕ ಸಾಮಗ್ರಿಗಳನ್ನು ಖರೀದಿಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ, ಜಂಟಿ ಕೃಷಿ ನಿರ್ದೇಶಕ ಬಸವರಾಜ ಐ.ಬಿ., ಮತ್ತಿತರರು ಸಭೆಯಲ್ಲಿದ್ದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *