ರಾಜ್ಯ

ಹಿಂದುಳಿಗ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ

ಬೆಂಗಳೂರು prajakiran.com ಮೇ 12 :

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು , ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು ತೀರ್ಪುಗಳ ಸಂಪೂರ್ಣ ವಿಶ್ಲೇಷಣೆ ಮಾಡಲಾಗುತ್ತಿದೆ.

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಯೋಗವನ್ನು ರಚಿಸಲಾಗಿದೆ. ವಿರೋಧಪಕ್ಷದ ನಾಯಕರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ನಿಲುವು ಹಾಗೂ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ಇದುವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನಾತ್ಮಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ರೀತ್ಯ ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂದರು.

ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯ ನೀಡಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡಬೇಕೆಂಬುದು ಸರ್ಕಾರ ಹಾಗೂ ಎಲ್ಲ ಪಕ್ಷಗಳ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು‌ ಅವರು ಹೇಳಿದರು.

ಓಬಿಸಿಯನ್ನು ಪರಿಗಣಿಸುವ ಪ್ರಕ್ರಿಯೆ ಸಮಯ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಮದ್ಯಪ್ರದೇಶ ರಾಜ್ಯದವರು ಒಂದು ಆಯೋಗವನ್ನು ರಚಿಸಿ ವರದಿ ತರಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ನೀಡಿತ್ತು.

ಈ ಸಂದರ್ಭದಲ್ಲಿ ಬಂದ ತೀರ್ಪಿನ ಬಗ್ಗೆ ರಿವ್ಯೂ ಪಿಟಿಷನ್ ಹಾಕಿಕೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಹಲವಾರು ವರದಿಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದರು.

ಸುಪ್ರೀಂ ಕೋರ್ಟ್‍ನ ಸೂಚನೆಯಂತೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ಬಗ್ಗೆ ನಿಖರವಾದ ಅಂಕಿಅಂಶಗಳುಳ್ಳ ವರದಿಯನ್ನು ಸಿದ್ಧಪಡಿಸಲು ಆಯೋಗವನ್ನು ರಚಿಸಲಾಗಿದೆ.

ಯಾವೆಲ್ಲ ಸಮುದಾಯಗಳಿಗೆ ಎಷ್ಟು ರಾಜಕೀಯ ಪ್ರಾತಿನಿಧ್ಯ ದೊರಕುತ್ತಿದೆ ಎಂಬ ನಿಖರ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುತ್ತದೆ.

ಹಿಂದಿನ ಸುಪ್ರೀಂ ಕೋರ್ಟ್ ಆದೇಶವನ್ನು ಈಗಾಗಲೇ ಪಾಲಿಸಲಾಗುತ್ತಿದೆ. ಪ್ರಸ್ತುತ ಇನ್ನೊಂದು ಆದೇಶ ಬಂದಿದೆ. ಇದರ ಪರಿಣಾಮಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.

ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *