ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಹಾಗೂ ಹಾಸನ ಹಾಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.
ಅಲ್ಲದೆ, ಸಾವಿರಾರು ಅಮಾಯಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗರತ್ನ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಎಸ್ ಐ ಟಿ ತನಿಖೆ ನಡೆಸುವಂತೆ ಗಮನ ಸೆಳೆದಿದ್ದರು.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಅವರು ವಿವರಿಸಿದ್ದಾರೆ
ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.